ಮೈಸೂರು: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲವು ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟವನ್ನೂ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದ್ದು ಬೆಟ್ಟಕ್ಕೆ ರಾತ್ರಿ ವೇಳೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ದಸರಾಗೆ ಕೇವಲ ಒಂದೂವರೆ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಚಾಮುಂಡಿ ಬೆಟ್ಟದಲ್ಲಿ ಈಗಿನಿಂದಲೇ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಗರ ಹಾಗೂ ಚಾಮುಂಡಿ ಬೆಟ್ಟದಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚಾಮಂಡಿ ಬೆಟ್ಟದಲ್ಲಿ ಪೊಲೀಸರು ನೈಟ್ ರೌಂಡ್ಸ್‍ನ್ನು ಆರಂಭಿಸಿದ್ದಾರೆ.ರಾತ್ರಿ 9ರ ನಂತರ ಚಾಮುಂಡಿ ಬೆಟ್ಟಕ್ಕೆ ತೆರಳುವ ಪ್ರತಿಯೊಬ್ಬರ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯರಿಗೆ ಮಾತ್ರ ಬೆಟ್ಟಕ್ಕೆ ಪ್ರವೇಶ ನೀಡಲಾಗುತ್ತಿತ್ತು. ಉಳಿದವರಿಗೆ ರಾತ್ರಿ ವೇಳೆ ನಿರ್ಬಂಧ ವಿಧಿಸಲಾಗಿದೆ.
ಅದೇ ರೀತಿ ನಗರದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಲಾಡ್ಜ್, ರೆಸ್ಟೋರೆಂಟ್‍ಗಳಿಗೆ ಆಗಮಿಸುವ ಪ್ರತಿಯೊಬ್ಬರ ಸಂಪೂರ್ಣ ಮಾಹಿತಿ ಪಡೆದು ಕೊಠಡಿಗಳನ್ನು ನೀಡಬೇಕೆಂದು ಪೊಲೀಸರು ಮಾಲೀಕರಿಗೆ ತಿಳಿಸಿದ್ದಾರೆ.