
ಮೈಸೂರು: ಮೈಸೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ ಹಾಗೂ ಉಗಳುವವರಿಗೆ 100 ರೂ. ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಸೋಂಕು ತಡೆಗಟ್ಟುವ ಸಂಬಂಧ ಮೈಸೂರು ಮಹಾನಗರ ಪಾಲಿಕೆಯು ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕಛೇರಿಗಳಲ್ಲಿ, ಕಾರ್ಖಾನೆಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದ್ದರೂ ಜನತೆ ನೀಡಿದ ಸೂಚನೆಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ ವಿಧಿಸಲು ಮುಂದಾಗಿದೆ.

ಭಾರತ ಸರ್ಕಾರದ ಗೃಹ ಸಚಿವಾಲಯವು 15/4/2020ರಂದು ಆದೇಶ ಹೊರಡಿಸಿ ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕೋವಿಡ್-19 ಸೋಂಕು ಹರಡದಂತೆ ಪಾಲಿಸಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಿದ್ದು ಅದರನ್ವಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕೆಲಸದ ಸ್ಥಳಗಳಲ್ಲಿ ಪ್ರತಿ ಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡದ ಮೂಲಕ ಶಿಕ್ಷಿಸಲು ಸೂಚಿಸಿದೆ.
ಆದರೆ ಕೆಲವು ಸಾರ್ವಜನಿಕರು ಬೇಜವ್ದಾರಿತನದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮುಖಕವಚಗಳನ್ನು ಧರಿಸದಿರುವುದು ಹಾಗೂ ಉಗುಳುವುದು ಕಂಡು ಬಂದಿದ್ದು, ಈ ನಡವಳಿಕೆಯಿಂದ ಇತರೇ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಹಾಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಲಿದೆ.
ಈ ಹಿನ್ನೆಲೆಯಲ್ಲಿ 30/4/2020ರವರೆಗೆ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ವಿಷಯದ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತಿದ್ದು, ನಂತರ ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದಲ್ಲಿ 30/4/2020ರಿಂದ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಕಾಯ್ದೆ 1976ರ ನಿಯಮ-431ರನ್ವಯ 100ರೂ.ದಂಡ ವಿಧಿಸಲಾಗುವುದು. ಉಲ್ಲಂಘನೆಯ ಕಟ್ಟುನಿಟ್ಟಿನ ಮೇಲ್ವಿಚಾರಣೆಗಾಗಿ ಪಾಲಿಕೆಯ 09ವಲಯ ಕಛೇರಿ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ತಿಳಿಸಿದ್ದಾರೆ.