ಕೊರೊನಾ ಹಿನ್ನೆಲೆ ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2020 ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. ಅಲ್ಲದೆ ಸರ್ಕಾರ ದಸರಾದ ನೇರ ವೀಕ್ಷಣೆಗಾಗಿ ವರ್ಚುಯಲ್ ಪ್ರಸಾರ ಮಾಡಲಿದೆ. ಇದಕ್ಕೆ ರಾಜ್ಯದ ಜನರು ಕೂಡ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯಕ್ಕೆ 15 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 14ರ ಮಧ್ಯರಾತ್ರಿಯಿಂದಲೇ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ನಂಜನಗೂಡು ದೇವಾಲಯಕ್ಕೂ ಪ್ರವೇಶ ನಿಷೇಧ ಮಾಡಿದ್ದು, ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಪ್ರವಾಸಿಗರು ಹೋಗುವಂತಿಲ್ಲ.

ಕಳೆದ ವರ್ಷ ದಸರಾ ಸಮಯದಲ್ಲಿ ಲಕ್ಷಾಂತರ ಜನ ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ವರ್ಷ ಸೋಂಕು ಹಡುತ್ತಿರುವುದರಿಂದ ಈ ಸಂಖ್ಯೆಯ ಜನರು ಮೈಸೂರಿಗೆ ಆಗಮಿಸಿದರೆ ಹೆಚ್ಚಿನ ಜನರಿಗೆ ಸೋಂಕು ಹರಡಬಹುದು ಎಂಬ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Leave a Comment

Scroll to Top