ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ ರಾಗಿದ್ದಾರೆ.
111 ವರ್ಷ ಸಾರ್ಥಕ ಜೀವನ ನಡೆಸಿದ್ದ ಶ್ರೀಗಳು ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11-44ರಲ್ಲಿ ವಿಧಿವಶರಾಗಿದ್ದಾರೆ.
ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ 1, 1908ರಲ್ಲಿ ೧೩ನೇ ಮಗು ಶಿವಣ್ಣನವರಾಗಿ ಜನಿಸಿದರು.
12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ 3, 1930ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದರು. ‘
ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಪೂಜ್ಯ ಸ್ವಾಮೀಜಿಯವರ 100ನೇ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ. 2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.